Home ಅರೋಗ್ಯಸರ್ಕಾರಿ ವೈದ್ಯರ ಖಾಸಗಿ ಸೇವೆಗೆ ಗ್ರೀನ್ ಸಿಗ್ನಲ್: ಆದರೆ ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ!

ಸರ್ಕಾರಿ ವೈದ್ಯರ ಖಾಸಗಿ ಸೇವೆಗೆ ಗ್ರೀನ್ ಸಿಗ್ನಲ್: ಆದರೆ ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ!

by Editor

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆಯಲ್ಲಿ ಉಂಟಾಗುತ್ತಿರುವ ವ್ಯತ್ಯಯ ಮತ್ತು ಸಾರ್ವಜನಿಕರಿಗಾಗುತ್ತಿರುವ ತೊಂದರೆಗಳ ಬಗ್ಗೆ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆ ನಡೆಯಿತು. ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಮರುಹೊಂದಾಣಿಕೆ (Rationalization) ಮಾಡುವ ಮೂಲಕ 24 ಗಂಟೆಯೂ ಗುಣಮಟ್ಟದ ಆರೋಗ್ಯ ಸೇವೆ ಸಿಗುವಂತೆ ಮಾಡಲು ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದ ಸಚಿವರು, ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಸರ್ಕಾರಿ ವೈದ್ಯರು ತಮ್ಮ ನಿಗದಿತ ಕರ್ತವ್ಯದ ಅವಧಿಯ ನಂತರ ಖಾಸಗಿ ಸೇವೆ ನೀಡಲು ಅವಕಾಶವಿದೆ ಎಂದರು. ಆದರೆ, ಈ ಖಾಸಗಿ ಸೇವೆಯು ಯಾವುದೇ ಕಾರಣಕ್ಕೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಯಾಗಬಾರದು. ಒಂದು ವೇಳೆ ವೈದ್ಯರು ತಮ್ಮ ಅಧಿಕೃತ ಕೆಲಸದ ಅವಧಿಯಲ್ಲಿ ಖಾಸಗಿ ಕ್ಲಿನಿಕ್‌ಗಳಲ್ಲಿ ಕಂಡುಬಂದಲ್ಲಿ ಅಥವಾ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ನಿರ್ಲಕ್ಷಿಸಿ ಖಾಸಗಿಗೆ ಶಿಫಾರಸು ಮಾಡಿದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಇತ್ತೀಚಿನ ಹೊಸ ಮಾರ್ಗಸೂಚಿಯಂತೆ, ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ (In-patients) ಚಿಕಿತ್ಸೆ ನೀಡುವುದನ್ನು ನಿರ್ಬಂಧಿಸಲಾಗಿದ್ದು, ಕೇವಲ ಹೊರರೋಗಿ (OPD) ವಿಭಾಗಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ವೈದ್ಯರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗುವಂತೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ವೈದ್ಯರು ವೃತ್ತಿ ಧರ್ಮ ಪಾಲಿಸಬೇಕು ಎಂದು ಸಚಿವರು ಸದನದಲ್ಲಿ ತಿಳಿಸಿದರು.

You may also like

Leave a Comment