184
ದೇಶದ ವಿವಿಧ ರಾಜ್ಯಗಳಲ್ಲಿ ನಿಫಾ ವೈರಸ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ವಹಿಸಿದೆ. ಈ ವೈರಸ್ ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು ತಿನ್ನುವುದರಿಂದ ಅಥವಾ ಹಂದಿ ಮಾಂಸದ ಸೇವನೆಯಿಂದ ವೇಗವಾಗಿ ಹರಡಲಿದ್ದು, ಮನುಷ್ಯರಿಂದ ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ನಿಫಾ ವೈರಸ್ ಪೀಡಿತರ ಮರಣ ಪ್ರಮಾಣವು ಶೇ. 60 ರಿಂದ 75 ರಷ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡುವಂತೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜನರು ಹಣ್ಣುಗಳನ್ನು ತಿನ್ನುವ ಮುನ್ನ ಚೆನ್ನಾಗಿ ತೊಳೆದು ಬಳಸಲು ಮತ್ತು ಅರೆಬರೆ ಕಚ್ಚಿದ ಹಣ್ಣುಗಳಿಂದ ದೂರವಿರಲು ಇಲಾಖೆ ಸಲಹೆ ನೀಡಿದೆ.