ಪುತ್ತೂರು, ಮಾರ್ಚ್ 06:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ಉಚಿತ ಪ್ರದರ್ಶನದ ಹಿನ್ನೆಲೆಯಲ್ಲಿ ವಿವಾದ ತೀವ್ರಗೊಂಡಿದೆ. ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಹೆಚ್ಚಾಗಿದ್ದು, ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆಗಳು ಬಂದಿರುವುದಾಗಿ ಆರೋಪಿಸಲಾಗಿದೆ.
ಪುತ್ತೂರಿನ ಜಿಎಲ್ ಒನ್ ಮಾಲ್‌ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸಿನಿಮಾ ಪ್ರದರ್ಶನ ಆಯೋಜಿಸಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕೆಲವು ಹಿಂದು ಸಂಘಟನೆಗಳ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದರು.
ಈ ಕಾರ್ಯಕ್ರಮದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸಂದೇಶಗಳು ವೈರಲ್ ಆಗಿದ್ದು, ಜಿಎಲ್ ಒನ್ ಮಾಲ್‌ನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಕೆಲವು ಸಂದೇಶಗಳಲ್ಲಿ ಮುಸ್ಲಿಂ ಸಮುದಾಯದವರು ಮಾಲ್‌ಗೆ ತೆರಳಬಾರದು ಎಂಬ ರೀತಿಯ ಹೇಳಿಕೆಗಳೂ ಹರಿದಾಡುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ಚರ್ಚೆ ಉಂಟಾಗಿದೆ.
ಇದೀಗ ಕಾರ್ಯಕ್ರಮದ ಪೋಸ್ಟರ್‌ನಲ್ಲಿ ನೀಡಲಾಗಿದ್ದ ಬುಕ್ಕಿಂಗ್ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಹಾಗೂ ಬೆದರಿಕೆ ಹಾಕಲಾಗಿದೆ ಎಂದು ಸಂಘಟಕರು ಆರೋಪಿಸಿದ್ದಾರೆ. ಕೆಲವು ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕೆಲ ಮತಾಂಧ ಶಕ್ತಿಗಳು ಹಾಗೂ ವಿದೇಶದಿಂದ ಕರೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಂತಹ ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ. ಮುಂದೆಯೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳೀಯ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಗಾದಲ್ಲಿ ಇಟ್ಟುಕೊಂಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.