ಸುಬ್ರಹ್ಮಣ್ಯ, ಮಾರ್ಚ್ 19:ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ಬ್ರೇಕ್: ಹೋರಾಟಕ್ಕೆ ಸಜ್ಜಾದ ಗ್ರಾಮಸ್ಥರು.
ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಕಾರ ಪ್ರಸ್ತಾಪಿಸಿರುವ ‘ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸ್ಥಳೀಯರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮಂಗಳವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಭವನದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ, ಪ್ರಾಧಿಕಾರ ರಚನೆ ವಿರುದ್ಧ ಸಂಘಟಿತ ಹೋರಾಟ ನಡೆಸಲು ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ.
ಮಾಸ್ಟರ್ ಪ್ಲಾನ್ ಇರುವಾಗ ಪ್ರಾಧಿಕಾರವೇಕೆ?
ಸಭೆಯಲ್ಲಿ ಮಾತನಾಡಿದ ಗ್ರಾಮಸ್ಥರು ಹಾಗೂ ವರ್ತಕರು, “ಈಗಾಗಲೇ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಸ್ಟರ್ ಪ್ಲಾನ್ ಸಮಿತಿ ಅಡಿಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನೂ ಹಲವು ಯೋಜನೆಗಳು ಕ್ಯಾಬಿನೆಟ್ ಅನುಮೋದನೆಯ ಹಂತದಲ್ಲಿವೆ. ಹೀಗಿರುವಾಗ ಮತ್ತೊಂದು ಹೊಸ ಪ್ರಾಧಿಕಾರದ ಅವಶ್ಯಕತೆ ಇಲ್ಲಿಗೆ ಇಲ್ಲ” ಎಂದು ಅಭಿಪ್ರಾಯಪಟ್ಟರು.
ಪ್ರಾಧಿಕಾರ ರಚನೆಯಾದಲ್ಲಿ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು..
ಅಧಿಕಾರಶಾಹಿ ಧೋರಣೆ: ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಅಥವಾ ಸಚಿವರು ಅಧ್ಯಕ್ಷರಾಗಲಿದ್ದು, ಐಎಎಸ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಇದರಿಂದ ಸ್ಥಳೀಯ ಸಾರ್ವಜನಿಕರು ತಮ್ಮ ಕುಂದುಕೊರತೆಗಳಿಗಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ಅವಲಂಬಿಸಬೇಕಾಗುತ್ತದೆ ಮತ್ತು ಅವರು ಸುಲಭವಾಗಿ ಭೇಟಿಗೆ ಸಿಗುವುದಿಲ್ಲ ಎಂಬ ಆತಂಕ ವ್ಯಕ್ತವಾಯಿತು.
ಕಠಿಣ ನಿಯಮಾವಳಿಗಳು: ಪ್ರಾಧಿಕಾರ ಅಸ್ತಿತ್ವಕ್ಕೆ ಬಂದರೆ ಲೈಸೆನ್ಸ್ ಪಡೆಯುವುದು, ಹೊಸ ಕಟ್ಟಡ ನಿರ್ಮಾಣ ಸೇರಿದಂತೆ ದೈನಂದಿನ ಚಟುವಟಿಕೆಗಳಿಗೆ ಕಠಿಣ ನಿಯಮಗಳು ಜಾರಿಯಾಗಲಿವೆ. ಇದು ಸಾಮಾನ್ಯ ಜನರಿಗೆ ಮತ್ತು ವ್ಯಾಪಾರಸ್ಥರಿಗೆ ದೊಡ್ಡ ಸವಾಲಾಗಲಿದೆ ಎಂದು ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು.
ಪ್ರಾಧಿಕಾರ ರಚನೆಯ ಪ್ರಕ್ರಿಯೆ ಆರಂಭವಾಗುವ ಮೊದಲೇ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದ್ದು, ಇದರ ಭಾಗವಾಗಿ ಮಾರ್ಚ್ 19ರಂದು ಮತ್ತೊಂದು ಸುತ್ತಿನ ಸಾರ್ವಜನಿಕ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಹೋರಾಟದ ಮುಂದಿನ ಹಂತಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿವರಾಮ ಅವರು ತಿಳಿಸಿದರು.
ಸಭೆಯಲ್ಲಿ ಪ್ರಮುಖರಾದ ಶಿವರಾಮ ರೈ, ರವೀಂದ್ರ ಕುಮಾರ್ ರುದ್ರಪಾದ, ರಾಜೇಶ್ ಎನ್.ಎಸ್., ಪವನ್ ಕುಮಾರ್ ಎಂ.ಡಿ ಸೇರಿದಂತೆ ವರ್ತಕರು, ವಸತಿಗೃಹಗಳ ಮಾಲೀಕರು ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.