ಜೈಲಿನಲ್ಲಿ ದರ್ಶನ್ ಆತ್ಮಹತ್ಯೆ ಯತ್ನ ವದಂತಿ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳಿಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
“ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಕಾರಾಗೃಹದ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಹೊರತಾಗಿ ಬೇರೆ ಯಾವುದೇ ವಿಚಾರ ಇಲ್ಲ,” ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ವದಂತಿ ವ್ಯಾಪಕವಾಗಿ ಹರಡಿದ ಪರಿಣಾಮ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ದರ್ಶನ್ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿತ್ತು.
ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳ ತಂಡ ದರ್ಶನ್ ಇರುವ ಬ್ಯಾರಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಈ ಮಾಹಿತಿ ಸಂಪೂರ್ಣ ಸುಳ್ಳು ಎಂದು ದೃಢಪಡಿಸಿದೆ.
ಈ ಕುರಿತು ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯಿಸಿ, “ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಸಂಪೂರ್ಣ ಆಧಾರರಹಿತ. ಇಂತಹ ಸುಳ್ಳು ವದಂತಿಗಳನ್ನು ನಂಬಿ ಯಾರೂ ಪರಪ್ಪನ ಅಗ್ರಹಾರ ಜೈಲಿನ ಬಳಿ ಅನಗತ್ಯವಾಗಿ ಬರಬಾರದು,” ಎಂದು ಮನವಿ ಮಾಡಿದ್ದಾರೆ

ವದಂತಿಯ ತೀವ್ರತೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಸಿಬ್ಬಂದಿಯೂ ಸಹ ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಸತ್ಯಾಸತ್ಯತೆ ಪರಿಶೀಲಿಸಿರುವುದಾಗಿ ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಮನೋರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ದರ್ಶನ್ ಅವರ ಮಾನಸಿಕ ಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಈ ವದಂತಿ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಗೃಹ ಸಚಿವರು ಹಾಗೂ ಜೈಲು ಮಹಾನಿರ್ದೇಶಕರು ನೀಡಿರುವ ಅಧಿಕೃತ ಸ್ಪಷ್ಟನೆಯಿಂದ ವದಂತಿಗೆ ತೆರೆ ಬಿದ್ದಿದೆ.