ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಕತ್ತರಿ?: ಅನರ್ಹ ಫಲಾನುಭವಿಗಳ ಪಟ್ಟಿಗೆ ರಾಜ್ಯ ಸರ್ಕಾರ ಶಾಕ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳಿಂದ ಕೈಬಿಡಲು ಸರ್ಕಾರ ಸಮಗ್ರ ಪರಿಶೀಲನೆಗೆ ಮುಂದಾಗಿದೆ.

ನಿನ್ನೆ ನಡೆದ ಎಸ್‌ಐಆರ್ (SIR) ವಿಶೇಷ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಹೊರೆ ಆಗದಂತೆ ಹಾಗೂ ನಿಜವಾದ ಅರ್ಹ ಬಡ ಕುಟುಂಬಗಳಿಗೆ ಮಾತ್ರ ಯೋಜನೆಗಳ ಲಾಭ ತಲುಪಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಪ್ರಸ್ತುತ 1 ಕೋಟಿ 24 ಲಕ್ಷಕ್ಕೂ ಅಧಿಕ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಮತ್ತು ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಮೃತಪಟ್ಟವರ ಹೆಸರಿನಲ್ಲಿಯೂ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ.

ಇದಲ್ಲದೆ, ಆದಾಯ ತೆರಿಗೆ ಪಾವತಿಸುವವರೂ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಸೌಲಭ್ಯ ಪಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಯೋಜನೆ ಸೀಮಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಒಂದೇ ಮನೆಯಲ್ಲಿ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಅಕ್ರಮಗಳೂ ಪತ್ತೆಯಾಗಿದ್ದು, ಇಂತಹ ಪ್ರಕರಣಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೇತೃತ್ವದಲ್ಲಿ ಯೋಜನೆಗಳ ಸಮಗ್ರ ಪರಿಶೀಲನೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.