ಸಿಎಂ ಸಿದ್ದರಾಮಯ್ಯರಿಂದ ರಾಜೀನಾಮೆ ಘೋಷಣೆ: ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಪತ್ರ ಸಲ್ಲಿಕೆ
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವುದಾಗಿ ಘೋಷಿಸಿದ್ದಾರೆ. ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಹೈಕಮಾಂಡ್ ಸೂಚನೆಯಂತೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸೌಹಾರ್ದಯುತವಾಗಿ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆತ್ಮೀಯವಾಗಿ ಆಲಿಂಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರೇ ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ.