ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
ಬೆಂಗಳೂರು, ಜೂ. 3: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ರಾಜ್ಯದ ಜನತೆ ನೇರವಾಗಿ ವೀಕ್ಷಿಸಲು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ವಿಶೇಷ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.
ಲೋಕಭವನದ ಗಾಜಿನ ಮನೆಯಲ್ಲಿ ಸಂಜೆ 4.05ಕ್ಕೆ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮವನ್ನು ರಾಜ್ಯದ ವಿವಿಧ ಭಾಗಗಳ ಜನರಿಗೆ ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಹಯೋಗದಲ್ಲಿ ಡಿಜಿಟಲ್ ಪರದೆಗಳ ಮೂಲಕ ನೇರ ಪ್ರಸಾರ ಮಾಡಲಾಗುತ್ತಿದೆ.
ರಾಜ್ಯದ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾದ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ಕಾರ್ಯಕ್ರಮದ ಸಂಪೂರ್ಣ ಪ್ರಸಾರ ನಡೆಯಲಿದ್ದು, ಪ್ರಯಾಣಿಕರು ಹಾಗೂ ಸಾರ್ವಜನಿಕರು ಉಚಿತವಾಗಿ ವೀಕ್ಷಿಸಬಹುದಾಗಿದೆ. ದೂರದ ಪ್ರದೇಶಗಳ ಜನರೂ ಈ ಮಹತ್ವದ ಸಮಾರಂಭದ ಸಾಕ್ಷಿಯಾಗಲು ಅನುಕೂಲವಾಗುವಂತೆ ಈ ತಂತ್ರಜ್ಞಾನ ಆಧಾರಿತ ಉಪಕ್ರಮ ಕೈಗೊಳ್ಳಲಾಗಿದೆ.
ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಎಲ್ಲ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದ್ದು, ರಾಜ್ಯದ ಜನರ ಗಮನ ಇಂದು ಸಂಜೆ ಈ ಐತಿಹಾಸಿಕ ಕ್ಷಣದತ್ತ ಕೇಂದ್ರೀಕೃತವಾಗಿದೆ.