ತಮಿಳುನಾಡು ಬಿಜೆಪಿ ರಾಜಕೀಯದಲ್ಲಿ ಸಂಚಲನ: ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಮುಂದಿನ ನಡೆ ಬಗ್ಗೆ ತೀವ್ರ ಕುತೂಹಲ
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ದಿನಗಳಿಂದ ಅಣ್ಣಾಮಲೈ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದ ಬೆನ್ನಲ್ಲೇ, ಅವರ ರಾಜೀನಾಮೆ ಅಧಿಕೃತವಾಗಿ ಅಂಗೀಕಾರಗೊಂಡಿರುವುದಾಗಿ ವರದಿಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಅಣ್ಣಾಮಲೈ ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ. ಈ ಬೆಳವಣಿಗೆಯೊಂದಿಗೆ ದಕ್ಷಿಣ ಭಾರತದ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.
ರಾಜೀನಾಮೆಗೆ ಮುನ್ನ ಅಣ್ಣಾಮಲೈ ದೆಹಲಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೂ ಚರ್ಚೆ ನಡೆಸಿದ್ದರೆಂದು ವರದಿಗಳು ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ಉನ್ನತ ನಾಯಕರು ಅಣ್ಣಾಮಲೈ ಅವರನ್ನು ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದವು.
ಇಂದು ಮಧ್ಯಾಹ್ನ ಅಣ್ಣಾಮಲೈ ಸುದ್ದಿಗೋಷ್ಠಿ
ರಾಜೀನಾಮೆ ಅಂಗೀಕಾರಗೊಂಡಿರುವ ಬೆನ್ನಲ್ಲೇ ಅಣ್ಣಾಮಲೈ ಇಂದು ಮಧ್ಯಾಹ್ನ ಸಾಮಾಜಿಕ ಜಾಲತಾಣಗಳ ಮೂಲಕ ನೇರ ಪ್ರಸಾರದಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ರಾಜೀನಾಮೆಯ ಹಿಂದಿನ ಕಾರಣಗಳು ಹಾಗೂ ತಮ್ಮ ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.
ಹೊಸ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಊಹಾಪೋಹ
ತಮಿಳುನಾಡಿನ ಕೆಲವು ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಅಣ್ಣಾಮಲೈ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವ ಸಾಧ್ಯತೆಯ ಕುರಿತೂ ಚರ್ಚೆಗಳು ನಡೆಯುತ್ತಿವೆ. ಆದರೆ ಈ ಕುರಿತು ಅಣ್ಣಾಮಲೈ ಅಥವಾ ಅವರ ಆಪ್ತ ವಲಯದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ದಕ್ಷಿಣ ಭಾರತದಲ್ಲಿ ಬಿಜೆಪಿ ಎದುರು ಸವಾಲು?
ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ, ನಂತರ ರಾಜಕೀಯ ಪ್ರವೇಶಿಸಿ ತಮಿಳುನಾಡಿನಲ್ಲಿ ಬಿಜೆಪಿ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದರು. ಅವರ ರಾಜೀನಾಮೆ ದಕ್ಷಿಣ ಭಾರತದ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಅವರ ರಾಜಕೀಯ ನಡೆ ಯಾವ ದಿಕ್ಕು ಪಡೆದುಕೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.